Greater Bengaluru: ಕಟ್ಟಡಗಳಿಗೆ ವಿದ್ಯುತ್, ನೀರಿನ ಸಂಪರ್ಕ: ಸಿಎಂ ಸಭೆಯಲ್ಲಿ ಚರ್ಚಿಸಿದ್ದೇನು?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ ಸೋಮವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದಾರೆ.

17 ಡಿಸೆಂಬರ್ 2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ನೀಡಲು ಸಮಸ್ಯೆ ಆಗುತ್ತಿದೆ. ಸುಪ್ರೀಂಕೋರ್ಟ್ ನ ಆದೇಶ ಭಾರತದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತಿದ್ದು, ಎಲ್ಲ ರಾಜ್ಯಗಳೂ ಆದೇಶವನ್ನು ಅನುಷ್ಠಾನಗೊಳಿಸುತ್ತಿವೆಯೇ? ಎಂಬುದನ್ನು ಪರಿಶೀಲಿಸಿ, ನಂತರ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಸಭೆಯಲ್ಲಿ ನಿರ್ಧರಿಸಲಾಗಿದೆ.

ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ. ಒಟ್ಟಿನಲ್ಲಿ ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು ಎಂದು ಕೂಡ ಚರ್ಚಿಸಲಾಗಿದೆ.

ಸುಪ್ರೀಂಕೋರ್ಟ್ ಆದೇಶ ಅನುಷ್ಠಾನಗೊಳ್ಳುವ ಮುಂಚೆ ಸಲ್ಲಿಕೆಯಾಗಿರುವ ಅಂದರೆ ಮಾರ್ಚ್ 2025ರವರೆಗಿನ ಅರ್ಜಿಗಳನ್ನು ಪರಿಗಣಿಸಿ ಒಸಿ ಮತ್ತು ಸಿಸಿಯಿಂದ ವಿನಾಯ್ತಿಗೊಳಿಸಿ ವಿದ್ಯುತ್ ಮತ್ತು ನೀರಿನ ಸಂಪರ್ಕ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲು ಅಕ್ಟೋಬರ್ 8 ರಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಂಬಂಧಪಟ್ಟ ಇಲಾಖಾ ಸಚಿವರು, ಸರ್ಕಾರದ ಅಡ್ವೋಕೇಟ್ ಜನರಲ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಾಲಾಗಿದೆ.

Rakesh arundi

Leave a Reply

Your email address will not be published. Required fields are marked *