Priyank Kharge: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ ಆರೋಪಿ ಬಂಧನ
ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಅವಕಾಶ ನೀಡದಂತೆ ಮನವಿ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ಗುರುತಿಸಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ಆರೋಪಿ ದಿನೇಶ್ ನರೋಣಿ ಅವರನ್ನು ಬಂಧಿಸಲಾಗಿದೆ. ಸೋಲಾಪುರ ಮೂಲದ ಈ ಆರೋಪಿ, ಬೆದರಿಕೆ ಕರೆ ಮಾಡಿದ ನಂತರ ಲಾತೂರ್‌ಗೆ ತೆರಳಿದ್ದ ಎನ್ನಲಾಗಿದೆ. ಇಂದು ರಾತ್ರಿಯೊಳಗೆ ಆರೋಪಿಯನ್ನು ಬೆಂಗಳೂರು ಸದಾಶಿವನಗರ ಪೊಲೀಸ್ ಠಾಣೆಗೆ ಕರೆತರಲು ಸಾಧ್ಯತೆಯಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಿನೇಶ್ ನನ್ನು ಲಾತೂರ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗೆ ಅವಕಾಶ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಪತ್ರ ಬರೆದ ಬೆನ್ನಲ್ಲೇ ವಿವಾದ ಭುಗಿಲೆದ್ದಿದೆ. ಈ ನಡುವೆ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆಗಳು ಬರುತ್ತಿದ್ದು, ಕರೆ ಮಾಡಿದವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ವಿಡಿಯೋವನ್ನು ಸಚಿವರು ತಮ್ಮಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು.