Caste census: ಸೆ. 22ರಿಂದ ಜಾತಿ ಗಣತಿ ಫಿಕ್ಸ್ : ಸರ್ಕಾರದಿಂದ ಅಧಿಕೃತ ಆದೇಶ

ರಾಜ್ಯದಲ್ಲಿ ಸೆ.22ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಸರಕಾರ ಅಧಿಕೃತ ಆದೇಶ ಹೊರಡಿಸಿದ್ದು, ಈ ಮೂಲಕ ಎಲ್ಲಾ ಅನುಮಾನಗಳಿಗೆ ಸರ್ಕಾರ ಪೂರ್ಣ ವಿರಾಮ ಹಾಕಿದೆ.

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರವನ್ನು ಕೋರಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ.

ಸಮೀಕ್ಷೆಯ ಉದ್ದೇಶ ಮತ್ತು ಸಿದ್ಧತೆ

ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವುದು ಈ ಸಮೀಕ್ಷೆಯ ಮುಖ್ಯ ಗುರಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಗಣಿಸಿ ಸರ್ಕಾರವು ದಿನಾಂಕವನ್ನು ನಿಗದಿಪಡಿಸಿದೆ. ಈ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಈಗಾಗಲೇ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಿದ್ಧತೆಗಳನ್ನು ಆರಂಭಿಸಲಾಗಿದೆ.

ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮೀಕ್ಷೆಯ ಕುರಿತು ಮಾಹಿತಿ ನೀಡಲಾಗಿದೆ. ಸಮೀಕ್ಷಾ ಕಾರ್ಯದಲ್ಲಿ ತೊಡಗುವ ಗಣತಿದಾರರಿಗೆ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಸಮೀಕ್ಷೆಯಲ್ಲಿ ಸಂಪೂರ್ಣವಾಗಿ ಪಾಲ್ಗೊಳ್ಳುವಂತೆ ಮಾಡಲು ಮತ್ತು ಇದರ ಮಹತ್ವದ ಬಗ್ಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆಯೂ ನಿರ್ದೇಶನ ನೀಡಲಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಹಲವು ಸಚಿವರು ಜಾತಿ ಗಣತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.ಈ ಹಿನ್ನೆಲೆಯಲ್ಲಿ ನಿನ್ನೆ ಸಿಎಂ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸಿದ್ದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಸಿಎಂ ಯಾವುದೇ ಕಾರಣಕ್ಕೂ ಜಾತಿ ಗಣತಿ ಮುಂದೂಡುವುದಿಲ್ಲ ಎಂದು ಹೇಳಿದ್ದರು. ಇದೀಗ ಅಧಿಕೃತ ಆದೇಶದ ಮೂಲಕ ಸಮೀಕ್ಷೆ ಮುಂದೂಡಿಕೆ ಸುದ್ದಿಗಳಿಗೆ ಫುಲ್‌ ಸ್ಟಾಪ್‌ ಹಾಕಲಾಗಿದೆ.

Rakesh arundi

Leave a Reply

Your email address will not be published. Required fields are marked *