Student scholarships: ಇನ್ಮುಂದೆ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವಿದ್ಯಾರ್ಥಿ ವೇತನ
ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ‘ದೀಪಿಕಾ’ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಈ ಯೋಜನೆ ಮೂಲಕ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವೇತನ ಸಿಗಲಿದೆ.
ಉನ್ನತ ಶಿಕ್ಷಣ ಇಲಾಖೆ ಮತ್ತು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ದೀಪಿಕಾ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅಜೀಂ ಪ್ರೇಮ್ ಜಿ ಅವರು ಅಜೀಂ ಪ್ರೇಮ್ ಜಿ ಫೌಂಡೇಶನ್ ಮೂಲಕ ವಾರ್ಷಿಕ 30 ಸಾವಿರ ರೂ.ನಂತೆ 37,000 ವಿದ್ಯಾರ್ಥಿನಿಯರಿಗೆ ‘ದೀಪಿಕಾ’ ವಿದ್ಯಾರ್ಥಿ ವೇತನ ನೀಡಲಿದ್ದಾರೆ ಎಂದು ಪ್ರಶಂಸಿಸಿದರು.
ಈ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000/- ರೂ.ನಂತೆ ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಈ ಯೋಜನೆಯ ಫಲಾನುಭವಿಯಾಗಲು ವಿದ್ಯಾರ್ಥಿನಿಯರು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಪ್ರತಿ ವರ್ಷ ತಪ್ಪದೇ ಉತ್ತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಿದ್ದು, ಅವರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಈ ಯೋಜನೆಯನ್ನು ಅಜೀಂ ಪ್ರೇಮ್ ಜಿ ಆರಂಭಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಾವು ಗಳಿಸಿದ ಸಂಪತ್ತನ್ನು ಸಾಮಾಜಿಕ ಕಾರ್ಯಗಳಿಗೆ ವಿನಿಯೋಗಿಸುತ್ತಿರುವುದು ಸ್ವಾಗತಾರ್ಹ. ಕರ್ನಾಟಕದ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಮೊಟ್ಟೆ ಕೊಡುವ 1,500 ಕೋಟಿ ರೂಪಾಯಿಗಳ ಯೋಜನೆಗೆ ಕಳೆದ ವರ್ಷ ಒಡಂಬಡಿಕೆ ಮಾಡಿಕೊಂಡಿದ್ದೆವು. ಈ ವರ್ಷ ಉನ್ನತ ಶಿಕ್ಷಣಕ್ಕೆ ಬರುವ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿ ವೇತನದ ರೂಪದಲ್ಲಿ ನೆರವು ನೀಡಲು ಮುಂದೆ ಬಂದಿದ್ದು, ಸಂತಸತಂದಿದೆ ಎಂದರು.
ದೇಶದಲ್ಲಿ ಹಿಂದಿನಿಂದಲೂ ಹೆಣ್ಣುಮಕ್ಕಳೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿ, ಪೋಕ್ಸೋ ಸಮಸ್ಯೆ, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯವಾಗಿದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.