Cabinet: ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ: ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ
ಸರ್ಕಾರದ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಸರ್ಕಾರ ಬ್ರೆಕ್ ಹಾಕಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಚಟುವಟಿಕೆ ನಿಷೇಧಿಸಲು ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಇನ್ನುಮುಂದೆ ಕಾರ್ಯಕ್ರಮಕ್ಕೆ ಮುಂಚಿತವಾಗಿ ಅನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
2013 ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸರ್ಕಾರ, ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ಮುಂದಾಗಿದೆ. ಈ ಮೂಲಕ ಆರ್ಎಸ್ಎಸ್ ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.
ಈ ನಿಯಮ ಜಾರಿಯಾದರೆ ಆರ್ಎಸ್ಎಸ್ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಯಂತ್ರಣ ಮಾಡುವಂತೆ ಪ್ರಿಯಾಂಕ್ ಖರ್ಗೆ ಪತ್ರದ ಮೂಲಕ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು. ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಭಾರೀ ವಿವಾದ ಸೃಷ್ಟಿಯಾಗಿತ್ತು. ಇದರ ನಡುವೆ ಸಿದ್ದರಾಮಯ್ಯ ಸರ್ಕಾರ ಖರ್ಗೆ ಮನವಿಗೆ ಸ್ಪಂದಿಸಿ ಈ ತೀರ್ಮಾನ ತೀರ್ಮಾನ ಕೈಗೊಂಡಿದೆ.