Kalaburagi: ಕೃಷ್ಣಾ- ಭೀಮಾ ನದಿ ತೀರದಲ್ಲಿ ಪ್ರವಾಹ; ಅಧಿಕಾರಿಗಳಿಗೆ ತುರ್ತು ಕ್ರಮಕ್ಕೆ ಸಿಎಂ ಸೂಚನೆ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಜನರ ಬದುಕೇ ಕೊಚ್ಚಿ ಹೋಗುತ್ತಿದೆ. ಹೀಗಾಗಿ ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಭಾಯಿಸಲು ತುರ್ತು ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೃಷ್ಣಾ ಮತ್ತು ಭೀಮಾ ನದಿಗಳ ತೀರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಲ್ಕೂ ಜಿಲ್ಲೆಗಳ ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಡಿಸಿ ಮತ್ತು ಜಿಲ್ಲಾ ಸಿಇಒಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಬೇಕು. ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆಗಳನ್ನು ನೀಡಬೇಕು ಎಂದಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು. ಮಾನವ ಮತ್ತು ರಾಸುಗಳ, ಜಾನವಾರುಗಳ ಪ್ರಾಣ ಹಾನಿ ಆಗದಂತೆ ಎಚ್ಚರಿಕಾ ಕ್ರಮ ಕೈಗೊಳ್ಳಬೇಕು. ಸಂತ್ರಸ್ಥರಿಗೆ ಆಹಾರ ಕೇಂದ್ರಗಳು, ಜಾನವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಕೃಷ್ಣ ಭೈರೇಗೌಡ ಮತ್ತು ಶಾಲಿನಿ ರಜನೀಶ್ ಸಹ ಹಾಜರಿದ್ದ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ.