ಮೈಸೂರು ದಸರಾ ಉದ್ಘಾಟನೆ ಬಾನು ಮುಷ್ತಾಕ್ : ಸುಪ್ರೀಂ ಕೋರ್ಟ್‌ಗೆ ಅರ್ಜಿ,ನಾಳೆ ವಿಚಾರಣೆ
ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಸದ್ಯ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯನ್ನು ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.
ಸೆಪ್ಟೆಂಬರ್ 22ರಂದು ದಸರಾ ಉದ್ಘಾಟನಾ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅರ್ಜಿಯ ತುರ್ತು ವಿಚಾರಣೆಗೆ ಒಪ್ಪಿರುವ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 19, ಶುಕ್ರವಾರದಂದು ವಿಚಾರಣೆ ನಡೆಸಲು ಸಮ್ಮತಿಸಿದೆ.
ಈ ಬಾರಿಯ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತ್ತು. ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಬಾರದು ಎಂದು ಪ್ರತಾಪ್ ಸಿಂಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಭಿನ್ನ ನಂಬಿಕೆಯ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದರಿಂದ ಸಾಂವಿಧಾನಿಕ ಅಥವಾ ಕಾನೂನು ಹಕ್ಕನ್ನು ಉಲ್ಲಂಘಿಸುತ್ತದೆ ಎಂಬ ವಾದಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಬಾನು ಮುಸ್ತಾಖ್ ಅವರಿಗೆ ಹಿಂದೂ ಧರ್ಮದಲ್ಲಿ ನಂಬಿಕೆಯಿಲ್ಲ. ಅವರು ಹಿಂದೂ ವಿರೋಧಿಯಾಗಿದ್ದು, ಭುವನೇಶ್ವರಿಯನ್ನು ಅಪಮಾನ ಮಾಡಿದ್ದಾರೆ. ಬಾನು ಮುಷ್ತಾಕ್ ಆ ಹೇಳಿಕೆಗಳನ್ನು ಹಿಂಪಡೆದು ಕ್ಷಮೆಯಾಚಿಸಿದರೆ, ಅವರು ಸೆಪ್ಟೆಂಬರ್ 22 ರಂದು ದಸರಾ ಉದ್ಘಾಟನೆಗೆ ನಮ್ಮ ಅಭ್ಯಂತರವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.