G. Parameshwara: ಯಾವಾ ರಾಜಕೀಯ ಕ್ರಾಂತಿಯೂ ಇಲ್ಲ, ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಜಿ ಪರಮೇಶ್ವರ
ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯುತ್ತಾರೆ. ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ನವೆಂಬರ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಕರ್ನಾಟಕದ ಸಿಎಂ ಆಗುತ್ತಾರೆ ಎಂಬ ಎಲ್ ಆರ್ ಶಿವರಾಮೇಗೌಡ ಹೇಳಿಕೆಗೆ ತುಮಕೂರಲ್ಲಿ ಗೃಹ ಸಚಿವ ಡಾ. ಜಿ. ಪರಮೆಶ್ವರ್ ಪ್ರತಿಕ್ರಿಯಿಸಿದ್ದಾರೆ. ಯಾವುದೇ ರಾಜಕೀಯ ಕ್ರಾಂತಿ ನಡೆಯುವುದಿಲ್ಲ, ಎಲ್ಲವೂ ಶಾಂತಿಯಾಗಿದೆ. 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಅಂದುಕೊಂಡಿದ್ದೇವೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದನ್ನು ಒಪ್ಪಿಕೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಈ ವರ್ಷದ ಕೊನೆಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹಾರಿದಾಡುತ್ತಿತ್ತು. ಈ ಬಗ್ಗೆ ಬುಧವಾರ ಸಿದ್ದರಾಮಯ್ಯ ಅವರು ತಮ್ಮ ಎರಡನೇ ಅವಧಿಯಲ್ಲಿ ಎರಡುವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದೇನೆ ಹಾಗೂ ಇನ್ನುಳಿದ ಎರಡುವರೆ ವರ್ಷಗಳ ಕಾಲ ಕೂಡ ನಾನೇ ಸಿಎಂ ಆಗಿ ಮುಂದುವರಿದು, ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.