SL Bhyrappa: ಎಸ್ಎಲ್ ಭೈರಪ್ಪ: ಸ್ಮಾರಕ ನಿರ್ಮಾಣಕ್ಕೆ ಅಂತಿಮ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ
ಖ್ಯಾತ ಸಾಹಿತಿ, ಕಾದಂಬರಿಕಾರ ಎಸ್ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಭೈರಪ್ಪ ಅವರು ಹೆಚ್ಚು ಸಮಯಗಳ ಕಾಲ ಮೈಸೂರಿನಲ್ಲಿಯೇ ಇದ್ದರು. ಮೈಸೂರು ಅವರ ನೆಚ್ಚಿನ ಸ್ಥಳ, ಹೀಗಾಗಿ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸಲಾಗುವುದು ಎಂದರು. ಇದಕ್ಕೂ ಮುನ್ನ ಭೈರಪ್ಪನವರ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಸಿಎಂ ಮಾತನಾಡಿ ಸಾಂತ್ವನ ಹೇಳಿದರು.
ಭೈರಪ್ಪನವರ ಕೆಲವು ಕೃತಿಗಳನ್ನು ನಾನು ಓದಿದ್ದೇನೆ. ನನ್ನ ನೆಚ್ಚಿನ ಬರಹಗಾರರು ಅವರು, ಅವರ ಕಾದಂಬರಿಗಳು ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಕನ್ನಡದ ಯಾವ ಸಾಹಿತಿಯ ಯಾವ ಕೃತಿಗಳೂ ಇಷ್ಟು ಭಾಷೆಗೆ ಅನುವಾದಗೊಂಡಿಲ್ಲ ಎಂದರು. ಅವರಿಗೆ ಸರಸ್ವತಿ ಸಮ್ಮಾನ್, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಬಂದಿದ್ದವು. ಜ್ಞಾನಪೀಠ ಪ್ರಶಸ್ತಿಯೂ ಅವರಿಗೆ ಬರಬೇಕಿತ್ತು, ಅದಕ್ಕೆ ಅವರು ಅರ್ಹರಾಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.
ಎಸ್ಎಲ್ ಭೈರಪ್ಪ ಬುಧವಾರ ಬೆಂಗಳೂರಿನ ರಾಜರಾಜೇಶ್ವರಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಸದ್ಯ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭೈರಪ್ಪ ಅಂತಿಮ ದರ್ಶನ ನಡೆಯುತ್ತಿದ್ದು, ಮಧ್ಯಾಹ್ನದ ನಂತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಇದೆ. ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.